ಸುದ್ದಿ ಕಣಜ.ಕಾಂ
ಶಿವಮೊಗ್ಗ: ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಶೆಟ್ಟಿಹಳ್ಳಿ ವನ್ಯಜೀವಿ ಅಭಯಾರಣ್ಯ ಗಡಿಯನ್ನು ಮರುವಿನ್ಯಾಸಗೊಳಿಸಿ ಅಧಿಸೂಚನೆ ಹೊರಡಿಸುವ ಬಗ್ಗೆ ಬೆಂಗಳೂರಿನಲ್ಲಿ ನಡೆದ ಗುರುವಾರ ಸಭೆಯಲ್ಲಿ ಕೂಲಂಕಶವಾಗಿ ಚರ್ಚಿಸಲಾಯಿತು.
ಶೆಟ್ಟಹಳ್ಳಿ ಅಭಯಾರಣ್ಯ ಪ್ರದೇಶದ ವ್ಯಾಪ್ತಿಯಲ್ಲಿನ ಕೆಲವು ಗ್ರಾಮಗಳನ್ನು ಈ ಅರಣ್ಯ ಪ್ರದೇಶ ವ್ಯಾಪ್ತಿಗೆ ಒಳಪಡುವ ಬಗ್ಗೆ ಮತ್ತೊಮ್ಮೆ ನಿರ್ದಿಷ್ಟವಾಗಿ ಸಂಬಂಧಪಟ್ಟ ಕ್ಷೇತ್ರದ ಶಾಸಕರುಗಳೊಂದಿಗೆ ಚರ್ಚಿಸಿ ಅಂತಿಮಗೊಳಿಸುವಂತೆ ಹಾಗೂ ಈ ವ್ಯಾಪ್ತಿಯಲ್ಲಿ 40 ಕಲ್ಲು ಗಣಿಗಾರಿಕೆ ಮಂಜೂರಾತಿ ಅರ್ಜಿಗಳು ಬಾಕಿ ಇದ್ದು, ಅವುಗಳನ್ನು ಶೀಘ್ರ ಇತ್ಯರ್ಥ ಪಡಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.
ಕೊಲ್ಲೂರು-ಕೊಡಚಾದ್ರಿ ಕೇಬಲ್ ಕಾರ್ ಯೋಜನೆಗೆ ಸಹಕಾರ ನೀಡಿ: ಕೊಲ್ಲೂರು-ಕೊಡಚಾದ್ರಿ ಕೇಬಲ್ ಕಾರ್ ಯೋಜನೆ ಅನುಷ್ಠಾನ ಹಾಗೂ ಕೊಲ್ಲೂರನ್ನು 32 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಗೆ ವಿದ್ಯುತ್ ಕೇಬಲ್ ಎಳೆಯಲು ಇರುವ ತೊಡಕು ನಿವಾರಿಸಿ ಸೂಕ್ತ ಅನುಮತಿ ನೀಡುವಂತೆ ಕೋರಿದರು.
ಅನ್ ಲಾಕ್ ಬಳಿಕ ಹೇಗಿತ್ತು ಗಾಂಧಿ ಬಜಾರ್, ಎಎ ಸರ್ಕಲ್, ವಿಡಿಯೋ ರಿಪೋರ್ಟ್
ಈ ಭಾಗದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪಡೆಯಲಾಗಿದೆ. ಅರಣ್ಯ ಇಲಾಖೆಯ ಅನುಮತಿಯಿಲ್ಲದೇ ಈ ಕಾರ್ಯಗಳನ್ನು ನಡೆಸಲು ಅನಾನುಕೂಲವಾಗುತ್ತಿದೆ. ಆದ್ದರಿಂದ ಈ ಬಗ್ಗೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರ ನೀಡಬೇಕಾಗಿ ಸೂಚಿಸಿದರು.
ಪರಿಸರ ಸೂಕ್ಷ್ಮ ಪ್ರದೇಶದಿಂದ ಕೈಬಿಡಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಒಳಪಡುವುದರಿಂದ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಸೌಲಭ್ಯ ನೀಡಲು ಸಾಧ್ಯವಾಗುತ್ತಿಲ್ಲ. ಈ ಅಂಶವನ್ನು ಪರಿಶೀಲಿಸಿ, ಈ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಿಂದ ಹೊರಗಿಡುವ ಬಗ್ಗೆ ಕ್ರಮ ವಹಿಸುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಅಶೋಕ್ ನಾಯ್ಕ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ವನ್ಯಜೀವಿ) ಅಜಯ್ ಮಿಶ್ರಾ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಕಾರ್ಯಯೋಜನೆ) ಪಿ.ಸಿ. ರೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಯೋಜನೆಗಳು) ಬ್ರಿಜೇಶ್ ಕುಮಾರ್, ಜಿಲ್ಲಾಧಿಕಾರಿ ಶಿವಕುಮಾರ್ ಉಪಸ್ಥಿತರಿದ್ದರು.