ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಅನರ್ಹ ಕುಟುಂಬಗಳ ಸದಸ್ಯರು ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿದ್ದು, ಅವುಗಳನ್ನು ಕೂಡಲೇ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪಡಿತರ ಚೀಟಿದಾರರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಆರ್ಥಿಕ ಸಬಲರು, ಇತರ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಕಾರ್ಡ್ ಹಿಂದಿರುಗಿಸಬೇಕು. ಈ ಬಗ್ಗೆ ಹಲವು ಸಲ ಮನಸಿ ಕೂಡ ಮಾಡಲಾಗಿದೆ. ಕೆಲವರು ಈಗಾಗಲೇ ಕಾರ್ಡ್ಗಳನ್ನು ವಾಪಸ್ ನೀಡಿದ್ದಾರೆ. ಇನ್ನೂ ಸಾಕಷ್ಟು ಜನ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಸರ್ಕಾರದ ಮಾನದಂಡಗಳಿಗೆ ವಿರುದ್ಧವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದಲ್ಲಿ ತಕ್ಷಣ ತಾಲೂಕಿನ ತಹಸೀಲ್ದಾರರಿಗೆ ನೀಡಬೇಕು. ಇಲ್ಲದಿದ್ದರೆ, ಅಗತ್ಯ ವಸ್ತುಗಳ ಕಾಯ್ದೆ-1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ ಹಾಗೂ ಭಾರತೀಯ ದಂಡ ಸಂಹಿತೆ ಅನ್ವಯ ಕ್ರಮಕೈಗೊಳ್ಳಲಾಗುವುದು. ಜತೆಗೆ, ಹಂಚಿಕೆ ಪಡೆದ ಆಹಾರ ಧಾನ್ಯಗಳ ಮಾರುಕಟ್ಟೆ ಮೌಲ್ಯವನ್ನು ವಸೂಲಿ ಮಾಡಲಾಗುವುದು.
– ಕೆ.ಬಿ.ಶಿವಕುಮಾರ್, ಡಿಸಿ
ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅನರ್ಹರು?
- ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲ ಕಾಯಂ ನೌಕರರು, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಇಲ್ಲವೇ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು.
- ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೆರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಮುಂತಾದ ಒಂದು ವಾಣಿಜ್ಯ ವಾಹನವನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲ ಕುಟುಂಬಗಳು.
- ಕುಟುಂಬದ ವಾರ್ಷಿಕ ಆದಾಯವು 1.20ಲಕ್ಷ ರೂಪಾಯಿಗಿಂತಲೂ ಅಧಿಕವಿರುವ ಕುಟುಂಬಗಳ ಸದಸ್ಯರು ಪಡಿತರ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ.
https://www.suddikanaja.com/2021/03/09/deadline-to-return-bpl-cards-in-bhadravathi/