ಸುದ್ದಿ ಕಣಜ.ಕಾಂ
ಶಿವಮೊಗ್ಗ: ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಸರ್ಕಾರ ಎಲ್ಲ ಮುಜಾಗರೂಕತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಭೀತಿಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.
BSY PRESS MEET VIDEO REPORT
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದ್ದು, ಸಮಿತಿಯ ವರದಿಯ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು.
https://www.suddikanaja.com/2021/05/14/banana-stem-entrepreneur/
ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಕೋವಿಡ್ ನಿಂದ ಮಕ್ಕಳನ್ನು ರಕ್ಷಿಸಲು ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಮಾಡಲಾಗುವುದು. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಪಾಸಿಟಿವಿಟಿ ರೇಟ್ ಶೇ.5ಕ್ಕಿಂತ ಇಳಿಕೆ | ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5ಕ್ಕಿಂತ ಕೆಳಗೆ ಇಳಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆ ಇರಿಸಿದೆ. ಇದೇ ಮೊದಲ ಬಾರಿಗೆ 1,780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಪಡೆದುಕೊಳ್ಳಲಾಗಿದೆ. ಶಿವಮೊಗ್ಗ ಜಿಲ್ಲೆಗೆ 83 ವೈದ್ಯರ ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ನರ್ಸ್ ಗಳು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದ್ದು, ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಉಪಸ್ಥಿತರಿದ್ದರು.
https://www.suddikanaja.com/2021/05/17/covid-3rd-wave/